ಬೀದರ್: ಕೊರೊನಾ ವೈರಸ್ ಹಾವಳಿಯಿಂದ ಅನೇಕ ಸಾವು-ನೋವುಗಳು ಸಂಭವಿಸಿದ್ದು, ವೈರಸ್ ನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಅರ್ಹರೆಲ್ಲರೂ ವ್ಯಾಕ್ಸಿನ್ ತೆಗೆದುಕೊಳ್ಳಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದ್ದಾರೆ.
ಕ್ಷೇತ್ರ ವ್ಯಾಪ್ತಿಯ ಬೇಮಳಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ಆಸ್ಪತ್ರೆಗೆ ಬಂದವರಿಗೆ ವ್ಯಾಕ್ಸಿನ್ ಕೊಡಿಸಿ ಮಾತನಾಡಿದ ಅವರು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೂಡ ವ್ಯಾಕ್ಸಿನ್ ನೀಡುವ ಕೆಲಸವಾಗುತ್ತಿದೆ. ವ್ಯಾಕ್ಸಿನ್ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಕೆಲಸವಾಗಬೇಕಾಗಿದೆ. ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳು, ಗ್ರಾಮ ಪಂಚಾಯ್ತಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ವ್ಯಾಕ್ಸಿನ್ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಬೇಕು.
ವ್ಯಾಕ್ಸಿನ್ ಬಗ್ಗೆ ಗ್ರಾಮೀಣ ಭಾಗದ ಜನರಲ್ಲಿರುವ ಅಪನಂಬಿಕೆಗಳನ್ನು ದೂರಮಾಡುವ ಕೆಲಸವನ್ನು ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಪ್ರತಿಯೊಬ್ಬರು ಮಾಡಬೇಕಾಗಿದೆ. ಅರ್ಹತೆವೊಂದಿರುವ ಎಲ್ಲಾ ವಯೋಮಾನದವರಿಗೂ ವ್ಯಾಕ್ಸಿನ್ ನೀಡುವ ಕೆಲಸವಾಗಬೇಕಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಂಬಂಧಿಸಿದ ಎಲ್ಲಾ ಇಲಾಖೆಗಳನ್ನು ಬಳಸಿಕೊಂಡು ವ್ಯಾಕ್ಸಿನೇಷನ್ ಕೆಲಸ ಮಾಡಬೇಕು. ನಗರ ಪ್ರದೇಶ, ಗ್ರಾಮೀಣ ಭಾಗ ಸೇರಿದಂತೆ ಎಲ್ಲಾ ಕಡೆಗಳಲ್ಲೂ ಕೊರೊನಾ ವೈರಸ್ ಹಾವಳಿಯನ್ನು ತಡೆಗಟ್ಟಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಬೇಮಳಖೇಡ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂಧಿಗಳು, ವ್ಯಾಕ್ಸಿನ್ ಪಡೆಯಲು ಬಂದಿದ್ದ ಗ್ರಾಮಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು ಸೇರಿದಂತೆ ಅನೇಕರಿದ್ದರು.
ಸಿಸಿ ರಸ್ತೆ ಕಾಮಗಾರಿ ವೀಕ್ಷಣೆ:
ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಬೇಮಳಖೇಡದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಅದೇ ಗ್ರಾಮದಲ್ಲಿ ನಡೆಯುತ್ತಿದ್ದ 40 ಲಕ್ಷ ರೂ. ಮೊತ್ತದ ಸಿಸಿ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯಾವುದೇ ರೀತಿಯ ಸಮಸ್ಯೆಯಾಗದಂತೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಇದೇ ವೇಳೆ ಸೂಚಿಸಿದರು. ಗುತ್ತಿಗೆದಾರರು, ಮುಖಂಡರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.