ವಿಜಯಪುರ, ಅ.05: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಜಯಪುರ ಜಿಲ್ಲೆ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಆಲಮಟ್ಟಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಎಂ ಯಡಿಯೂರಪ್ಪ ರಾಜ್ಯದಲ್ಲಿ ಪ್ರವಾಹದಿಂದ ಸುಮಾರು ೩೪ ಸಾವಿರ ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ ೧೨೦೦ ಕೋಟಿ ರೂ ಬಿಡುಗಡೆ ಮಾಡಿದೆ. ಇನ್ನೂ ಹೆಚ್ಚಿನ ನೆರವು ನಮಗೆ ದೊರೆಯಲಿದೆ ಎಂದಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಭ್ರಮನಿರಸವಾಗಿದ್ದಾರೆ. ಹೀಗಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳು ಸ್ಥಗಿತವಾಗಿಲ್ಲ. ಆಲಮಟ್ಟಿ ಜಲಾಶಯ ಎತ್ತರಗೊಳಿಸಲು ತೀರ್ಮಾನಿಸಲಾಗಿದೆ. ಮುಂದಿನ ಬಜೆಟ್ ನಲ್ಲಿ ೨೦ ಸಾವಿರ ಕೋಟಿ ರೂ ಈ ಯೋಜನೆಗೆ ಮೀಸಲಿಡುವುದಾಗಿ ಘೋಷಣೆ ಮಾಡಿದ್ದಾರೆ.ರಾಜ್ಯದಲ್ಲಿ ಸದ್ಯಕ್ಕೆ ನೂತನ ಜಿಲ್ಲೆಗಳ ರಚನೆ ಪ್ರಕ್ರಿಯೆ ಇಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚನೆ ಮಾಡುತ್ತೇವೆ ಎಂಬುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಅರಣ್ಯ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ ಸಿ ಪಾಟೀಲ ಹಾಗೂ ಶಾಸಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.