ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಮಿತ್ರರ ಜೊತೆ ಮಾತನಾಡಿದ ಅವರು, ಕೃಷ್ಣಾ ನದಿ ನೀರಿನ ಹಂಚಿಕೆ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ಬ್ರಿಜೇಶ್ ಕುಮಾರ್ ಪಟೇಲ್ ಅವರ ನೇತೃತ್ವದಲ್ಲಿ ಟ್ರುಬ್ಯುನಲ್ ರಚಿಸಲಾಯಿತು. ಇದರ ತೀರ್ಪಿನಂತೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ಹಂತದಲ್ಲಿ ಆಂದ್ರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲು ಏರಿತು. ಮಹಾರಾಷ್ಟ್ರ ಹಾಗೂ ಕರ್ನಾಟಕ ಒಟ್ಟಾಗಿ ಇದನ್ನು ಎದುರಿಸುತ್ತಿದ್ದೇವೆ ಎಂದರು.
ಒಂದುವರೆ ತಿಂಗಳ ಒಳಗಾಗಿ ಸುಪ್ರೀಂಕೋರ್ಟ್ ತೀರ್ಪು ಬರಬಹುದು. ನಮ್ಮ ಪಾಲಿನ ನೀರಿನ ಬಳಕೆಗೆ ಅನುಮತಿ ದೊರೆಯುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ತಕ್ಷಣ ಪುನರ್ವಸತಿ ಕಾರ್ಯಕ್ರಮ ರೂಪಿಸಿ, ಆಲಮಟ್ಟಿ ಜಲಾಶಯದ ಎತ್ತರವನ್ನು ಏರಿಸಲಾಗುವುದು. ಈ ಬಗ್ಗೆ ಸರ್ಕಾರಕ್ಕೆ ಸ್ಪಷ್ಟತೆಯಿದೆ. ಜಲಾಶಯದ ಎತ್ತರ ಹೆಚ್ಚಳದಿಂದ 13.50 ಲಕ್ಷ ಚದುರ ಪ್ರದೇಶ ನೀರಾವರಿಗೆ ಒಳಪಡುವುದು. ಇದಕ್ಕೆ ಪ್ರಾಶಸ್ತ್ಯ ನೀಡಿ ಕೆಲಸ ಮಾಡಲಾಗುವುದು ಎಂದರು.