ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಟ್ಟು 530 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿ.ಇ.ಟಿ.-2021) ನಡೆಸಲು ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿದ್ದು, ಕೋವಿಡ್ ಅನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಆ.28ರಂದು ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಪರೀಕ್ಷೆ ನಡೆದರೆ, ಆ.29ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆಯು ಆ.30ರಂದು ನಿಗದಿಯಾಗಿದೆ.
530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದರೆ, ಉಳಿದ 444 ಕೇಂದ್ರಗಳು ಇನ್ನುಳಿದ ಜಿಲ್ಲೆಗಳಲ್ಲಿವೆ. ಆಯಾ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಹಾಯಕ ಆಯುಕ್ತರ ಮಟ್ಟದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನಾಗಿ ನೇಮಕ ಮಾಡಿದ್ದಾರೆ ಎಂದು ಅಶ್ವತ್ಥ ನಾರಾಯಣ ಅವರು ತಿಳಿಸಿದ್ದಾರೆ.
ಪರೀಕ್ಷೆ ನಡೆಯುವ ದಿನಗಳಂದು ಗೃಹ ಇಲಾಖೆಯು ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಲಿದೆ. ಜೊತೆಗೆ ಒಟ್ಟು 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಇದೇ 30ರಂದು 6 ಸ್ಥಳಗಳಲ್ಲಿ ನಡೆಯಲಿದೆ. ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಗೆ 1682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಪರೀಕ್ಷೆ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು:
- ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು.
- ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಗಳು ತಮ್ಮ ಹೆಸರನ್ನು ಬರೆಯಬೇಕು. ಅಭ್ಯರ್ಥಿಗಳು ಸಿಇಟಿ ಸಂಖ್ಯೆಯನ್ನು, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಬರೆದು ಅದಕ್ಕೆ ಸಂಬಂಧಿಸಿದ ವೃತ್ತಗಳನ್ನು ಸಂಪೂರ್ಣವಾಗಿ ತುಂಬಬೇಕು.
- ಒಎಂಆರ್ ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆಯಲ್ಲಿರುವ ಕ್ರಮ ಸಂಖ್ಯೆ ಒಂದೇ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.
- ಉತ್ತರಗಳನ್ನು OMR ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಸಬೇಕಾಗಿರುವುದರಿಂದ, ಅಭ್ಯರ್ಥಿಗಳು ತಮ್ಮ ಜೊತೆಯಲ್ಲಿ ನೀಲಿ (Blue) ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ (Black Ink Ball Point) ಪೆನ್ನನ್ನು ತೆಗೆದುಕೊಂಡು ಹೋಗಬೇಕು.
- ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ. ಹಾಗೆಯೇ ಪರೀಕ್ಷೆಯ ಮೊದಲನೆ ಬೆಲ್ ಆಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು (ಕೆಇಎ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಿ)
- ಪ್ರವೇಶ ಪತ್ರದ ಜೊತೆಯಲ್ಲಿ ಅಭ್ಯರ್ಥಿಯು ಕಡ್ಡಾಯವಾಗಿ ಮಾನ್ಯತೆ ಇರುವ ಕಾಲೇಜಿನ ಗುರುತಿನ ಚೀಟಿ, 2ನೇ ಪಿಯುಸಿ / 12ನೇ ತರಗತಿಯ ಪ್ರವೇಶಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಇವುಗಳಲ್ಲಿ ಯಾವುದಾದರೂ ಒಂದನ್ನು ತೆಗೆದುಕೊಂಡು ಹೋಗಬೇಕು.
- ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು / ತೆಗೆದುಕೊಂಡು ಹೋಗುವಂತಿಲ್ಲ. ಅಭ್ಯರ್ಥಿಗಳು ಕೊಠಡಿಯ ಒಳಗೆ ಯಾವುದೇ ಟ್ಯಾಬ್ಲೆಟ್ / ಮೊಬೈಲ್ / ಕ್ಯಾಲುಕುಲೇಟರ್‌ಗಳನ್ನು ತರುವಂತಿಲ್ಲ.
- •ಅಭ್ಯರ್ಥಿಗಳು ಓ.ಎಂ.ಆರ್. ಉತ್ತರ ಹಾಳೆಯಲ್ಲಿ ಎಡಗೈ ಹೆಬ್ಬೆರಳ ಗುರುತನ್ನು ಹಾಕುವಂತಿಲ್ಲ.