ವಿಜಯಪುರ: ರಾಜ್ಯದಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಅವರು ತಿಳಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಗಳಲ್ಲಿ ಹಾಗೂ ವಿಶೇಷವಾಗಿ ಮಹಾರಾಷ್ಟ್ರ ಮತ್ತು ಕೇರಳ ಗಡಿಭಾಗಗಳಲ್ಲಿ ತಪಾಸಣೆ ಮತ್ತು ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಇತ್ತೀಚೆಗೆ ಎಂಡು ದೇಶಗಳಲ್ಲಿ ಕರೋನಾ ಸಾಂಕ್ರಾಮಿಕ ಉಲ್ಬಣವಾಗಿದೆ. ಭಾರತದ ನೆರೆಯ ದೇಶಗಳಾದ ಥೈಲ್ಯಾಂಡ್, ಇಂಡೋನೇಷ್ಯಾ, ಚೈನಾ ದೇಶಗಳಲ್ಲಿಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇಲ್ಲ್ಲಿಯೂ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರಿಂದ ಪ್ರಧಾನಮಂತ್ರಿಗಳು ಮುಂಜಾಗ್ರತೆ ವಹಿಸಿ ಎಲ್ಲ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ನಿನ್ನೆ ನಡೆದಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಕೆಲವು ಕರೋನಾ ಸೂಕ್ತ ನಡವಳಿಕೆಗಳನ್ನು ಪುನ: ಜಾರಿಗೊಳಿಸಲು ಸೂಚಿಸಲಾಗಿದೆ. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಎಲ್ಲರೂ ಇದನ್ನು ಪಾಲಿಸಿದರೆ ಉತ್ತಮ. ಇದುವರೆಗೂ ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ. ಆದರೂ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.