ಬೆಂಗಳೂರು: ಜೆಡಿಎಸ್ ತ್ಯಜಿಸಿರುವ, ಶಾಸಕ ಶಿವಲಿಂಗೇಗೌಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, 9ರಂದು ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ
ಬೆಂಗಳೂರಿನಲ್ಲಿ ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆಗೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯದ ಜನ ಕಾಂಗ್ರೆಸ್ ಪರ ಒಲವು ತೋರುತ್ತಿದ್ದು, ಕಾಂಗ್ರೆಸ್ ಪಕ್ಷ ಗೆಲುವಿನತ್ತ ಹೆಜ್ಜೆ ಹಾಕುತ್ತಿದೆ. ಈ ಕಾರಣಕ್ಕೆ ಅನೇಕ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ನಿನ್ನೆ ಗೋಪಾಲಕೃಷ್ಣ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಗೋಪಾಲಕೃಷ್ಣ ಅವರು ಯಾವುದೇ ಷರತ್ತು ಇಲ್ಲದೆ, ಪಕ್ಷದ ಕಾರ್ಯಕರ್ತನಾಗಿ ದುಡಿಯಲು ಸಿದ್ಧನಿದ್ದೇನೆ ಎಂದು ನಮ್ಮ ಬಳಿ ಇಚ್ಛೆ ವ್ಯಕ್ತಪಡಿಸಿದರು. ಅವರು ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದಾಗ ನೀವು ಈಗಾಗಲೇ ಶಾಸಕರಾಗಿದ್ದು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂದು ನಾನು ಕೇಳಿದೆ. ಅದಕ್ಕೆ ಅವರು ಉತ್ತರಿಸಿ, ‘ ನಾನು ಬಿಜೆಪಿಯನ್ನು ನೋಡಿದ್ದೇನೆ. ನಾನು ಸಾಯುವ ಮುನ್ನ ಕಾಂಗ್ರೆಸಿಗನಾಗಿ ಸಾಯಬೇಕು ಅದಕ್ಕಾಗಿ ನಾನು ಕಾಂಗ್ರೆಸ್ ಸೇರಲು ಬಯಸುತ್ತೇನೆ’ ಎಂದರು. ಇವರ ಸಹೋದರ ನ್ಯಾಯಾಧೀಶರಾಗಿದ್ದರೂ, ಸಂಸತ್ತಿನ ಸದಸ್ಯರಾಗಿದ್ದರು. ಅವರು ನೀನು ಬಿಜೆಪಿಗೆ ಹೋಗಿದ್ದರೂ ನಾನು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುತ್ತೇನೆ ಎಂದಿದ್ದರು. ಈ ರೀತಿ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬೆರೆತಿರುವ ನಾಯಕರು ಮತ್ತೆ ತಮ್ಮ ಮನೆಗೆ ಮರಳಿದ್ದಾರೆ. ಅವರ ಜತೆ ಸಾವಿರಾರು ಕಾರ್ಯಕರ್ತರು ಇಂದು ಪಕ್ಷ ಸೇರುತ್ತಿದ್ದಾರೆ. ಇಲ್ಲಿರುವ ಎಲ್ಲರೂ ಮೊದಲು ಕಾರ್ಯಕರ್ತರು, ನಂತರ ನಾಯಕರಾಗಿದ್ದಾರೆ.
ಇನ್ನು ಜೆಡಿಎಸ್ ಶಾಸಕರಾದ ಶಿವಲಿಂಗೇಗೌಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, 9ರಂದು ತಮ್ಮ ಕ್ಷೇತ್ರದಲ್ಲಿ ಪಕ್ಷ ಸೇರಲು ಕೋರಿದ್ದಾರೆ. ಪಕ್ಷಕ್ಕೆ ಅರ್ಜಿ ಹಾಕುವಂತೆ ನಾವು ಸೂಚನೆ ನೀಡಿದ್ದೇವೆ ಎಂದವರು ತಿಳಿಸಿದರು.
ಜೆಡಿಎಸ್ ಹಾಗೂ ಬಿಜೆಪಿ ಶಾಸಕರು ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ಈ ಸಂದರ್ಭದಲ್ಲಿ ದಲಿತ ಕವಿ ಸಿದ್ದಲಿಂಗಯ್ಯ ಅವರ ಮಾತು ನೆನಪಾಗುತ್ತಿದೆ. ಹೋರಾಟ ಸಾಗಾರ ಸಾವಿರಾರು ನದಿಗಳು ಸೇರಿದಂತೆ ಎಂದು ಹೇಳಿದ್ದಾರೆ. ಅದೇ ರೀತಿ ಕಾಂಗ್ರೆಸ್ ಎಂದರೆ ಹೋರಾಟದ ಸಾಗರವಾದರೆ ಈ ಪಕ್ಷಕ್ಕೆ ಸೇರುತ್ತಿರುವ ಶಾಸಕರು, ನಾಯಕರು ನದಿಯಾಗಿದ್ದಾರೆ ಎಂದರು.
ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆ ವಿರೋಧಿಸಿ ರಾಜ್ಯದ ಜನ ಕಾಂಗ್ರೆಸ್ ಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಮೂರ್ನಾಲ್ಕು ಬಾರಿ ಶಾಸಕರಾಗಿದ್ದ ನಾಯಕರೆಲ್ಲರೂ ತಮ್ಮ ಅಧಿಕಾರ ಅವಧಿ ಇದ್ದರೂ ಅದನ್ನು ತ್ಯಜಿಸಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಪುಟ್ಟಣ್ಣ ಅವರು ಪರಿಷತ್ ನಲ್ಲಿ ನಾಲ್ಕು ವರ್ಷ ಅಧಿಕಾರ ಹೊಂದಿದ್ದರು, ಬಾಬುರಾವ್ ಚಿಂಚನಸೂರು ಅವರು ಕೂಡ ಅಧಿಕಾರ ಅವಧಿ ಇತ್ತು. ಗೋಪಾಲಕೃಷ್ಣ ಅವರು ಕೂಡ ಈಗ ಬಂದಿದ್ದಾರೆ. ದಳದಿಂದ ಅನೇಕ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಡಬಲ್ ಇಂಜಿನ ಸರ್ಕಾರದಿಂದ ಯಾವುದೇ ರೀತಿಯ ಅನುಕೂಲವಾಗಿಲ್ಲ ಎಂದು ಜನ ರಾಜ್ಯದಲ್ಲಿ ಬದಲಾವಣೆಗೆ ತೀರ್ಮಾನ ಮಾಡಿದ್ದಾರೆ ಎಂದ ಅವರು, ಬೀದರ್‌ನಿಂದ ಚಾಮರಾಜನಗರದವರೆಗೂ ಅನೇಕ ಮಾಜಿ ಹಾಗೂ ಹಾಲಿ ಶಾಸಕರು ಪಕ್ಷ ಸೇರುತ್ತಿದ್ದಾರೆ. ಈ ಬಗ್ಗೆ ನಾನು ಹಾಗೂ ಸಿದ್ದರಾಮಯ್ಯ ಅವರು ಚರ್ಚೆ ಮಾಡಿದ್ದೇವೆ. ಅನೇಕ ನಾಯಕರು ರಾಜೀನಾಮೆ ನೀಡಿ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ. ಈಗ ಅವರ ಹೆಸರು ಹೇಳಲು ಬಯಸುವುದಿಲ್ಲ. ಅರ್ಜಿ ಬಂದ ನಂತರ ಉಳಿದ ವಿಚಾರ ಮಾತನಾಡುತ್ತೇವೆ. ಪಕ್ಷಕ್ಕೆ ಬರುವವರೆಲ್ಲರಿಗೂ ಸ್ಥಾನಮಾನ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಹಳ ಸೂಕ್ಷ್ಮವಾಗಿ ಪಕ್ಷ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ ಎಂದರು.