ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ ಬರೆಯಲಾಗಿದೆ. ಹೊನ್ನಾಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಂದಾಯ ಉಪ ವಿಭಾಗದ ಉಪ ವಿಭಾಗಾಧಿಕಾರಿಗಳ ಕಚೇರಿಯನ್ನು ಕಂದಾಯ ಸಚಿವ ಆರ್.ಅಶೋಕ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ಸೋಮವಾರ ಬೆಳಿಗ್ಗೆ ಉದ್ಘಾಟಿಸಿದರು.
ಸಂಜೀವಿನಿ ಯೋಜನೆ ಅಡಿಯಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಸುತ್ತುನಿಧಿ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಸಚಿವದ್ವಯರು ವಿತರಿಸಿದರು.
ಇದೇ ವೇಳೆ,ಹೊನ್ನಾಳಿ ಪಟ್ಟಣದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗೆ ಸಚಿವರಾದ ಅರ್.ಅಶೋಕ ಮತ್ತು ಬಿ.ಎ.ಬಸವರಾಜ್ (ಬೈರತಿ) ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ವಿಧಾನ ಪರಿಷತ್ ಸದಸ್ಯರಾದ ಅಯನೂರು ಮಂಜುನಾಥ್, ಡಿ.ಎಸ್. ಅರುಣ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್, ಹೊನ್ನಾಳಿ ತಾಲೂಕಿನ ಹಲ ಜನಪ್ರತಿನಿಧಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.