ಕೋಲ್ಕತ್ತಾ; ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸಿಎಂ ಪಟ್ಟ ಉಳಿಸಿಕೊಂಡಿದ್ದಾರೆ. ಭವಾನಿಪುರ ಕ್ಷೇತ್ರದಲ್ಲಿ ಅವರು ದಿಗ್ವಿಜಯ ಸಾಧಿಸುವ ಮೂಲಕ ಎದುರಾಳಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಚಕ್ರವ್ಯೂಹದೊಳಗೆ ಸಿಲುಕಿ ವೀರೋಚಿತ ಸೋಲುಂಡಿದ್ದ ಮಮತಾ ಬ್ಯಾನರ್ಜಿಯವರು ತಮ್ಮ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಪಶ್ಚಿಮ ಬಂಗಾಳದಲ್ಲಿ ಮತ್ತೆ ಅಧಿಕಾರಕ್ಕೆ ತರುವಲ್ಲಿ ಸಫಲರಾಗಿದ್ದರು. ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದ ಮಮತಾಗೆ ಈ ಉಪ ಚುನಾವಣೆಯಲ್ಲಿ ಗೆಲುವು ಅನಿವಾರ್ಯವಾಗಿತ್ತು.
ಈ ಬಾರಿ ಭವಾನಿಪುರ ಕ್ಷೇತ್ರದಲ್ಲಿ ಉಪಚುನಾವಣೆ ಎದುರಿಸಿದ್ದ ಅವರು, ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ಟಿಬ್ರೆವಾಲ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇಂದು ಮತಎಣಿಕೆ ಸಂದರ್ಭದಲ್ಲಿ ಮುನ್ನಡೆ ಕಾಯ್ದುಕೊಂಡು ಬಂದ ಮಮತಾ ಬ್ಯಾನರ್ಜಿ ಅವರು ಅಭ್ಯರ್ಥಿ ಪ್ರಿಯಾಂಕ ಟಿಬ್ರೆವಾಲ್ ವಿರುದ್ಧ 58,389 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಮಮತಾ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳ ನಾಯಕರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.