ಕೊರೋನಾ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಹೀಗಾಗಿ ಉತ್ತರಪ್ರದೇಶದಿಂದ ನಾನಾ ರಾಜ್ಯಗಳಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದ ಕಾರ್ಮಿಕರು ರಾಜ್ಯಕ್ಕೆ ತಂಡೋಪ ತಂಡವಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ, ಹೀಗೆ ರಾಜ್ಯಕ್ಕೆ ಆಗಮಿಸುವ ಕಾರ್ಮಿಕರ ಮೇಲೆ ಉತ್ತರ ಪ್ರದೇಶ ಸರ್ಕಾರ ರಾಸಾಯನಿಕಗಳನ್ನು ಸಿಂಪಡಿಸುವ ಮೂಲಕ ಅಮಾನವೀಯತೆ ಮೆರೆಯುತ್ತಿದೆ.
ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಈ ವಿಡಿಯೋವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಉತ್ತರಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, “ನಿಮಗೆ ಕಿಂಚಿತ್ತೂ ಮಾನವೀಯತೆ ಇಲ್ಲವೇ?” ಎಂದು ಸಿಎಂ ಯೋಗಿ ಆದಿತ್ಯಾನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಲ್ಲದೆ, “ಮಾರಣಾಂತಿಕ ಕೊರೋನಾ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ ಎಂದು ಉತ್ತರಪ್ರದೇಶ ಸರ್ಕಾರ ಹೇಳುತ್ತಿದೆ. ಆದರೆ, ದಯವಿಟ್ಟು ಇಂತಹ ಅಮಾನವೀಯ ಕೆಲಸಗಳನ್ನು ಮಾಡಬೇಡಿ. ಕೂಲಿ ಕಾರ್ಮಿಕರು ಈಗಾಗಳೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿ ರಾಜ್ಯಕ್ಕೆ ಹಿಂದಿರುಗಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲೆ ಸಾಮೂಹಿಕವಾಗಿ ರಾಸಾಯನಿಕಗಳನ್ನು ಸಿಂಪಡಿಸುವ ಮೂಲಕ ಅಮಾನವೀಯವಾಗಿ ನಡೆದುಕೊಳ್ಳಬೇಡಿ. ಹೀಗೆ ರಾಸಾಯನಿಕಗಳನ್ನು ಸಿಂಪಡಿಸುವ ಮೂಲಕ ಅವರ ಆರೋಗ್ಯ ಮತ್ತಷ್ಟು ಹದಗೆಡುವ ಸಾಧ್ಯತೆಯೇ ಹೆಚ್ಚು” ಎಂದು ಎಚ್ಚರಿಸಿದ್ದಾರೆ.