ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು 5 ಲಕ್ಷ ರೂ. ಗಳಿಗೆ ಏರಿಕೆ ಮಾಡುವುದಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ 1.70 ಲಕ್ಷ. ರೂ. ನೆರವು ನೀಡಲಾಗುತ್ತದೆ. ಇದರಿಂದ ಉತ್ತಮ ಮನೆ ನಿರ್ಮಾಣ ಅಸಾಧ್ಯ. ಆದ್ದರಿಂದ ಫಲಾನುಭವಿಗಳಿಗೆ 5 ಲಕ್ಷ ರೂ. ಅನುದಾನ ನೀಡಲು ಕೋರಿ ಮುಖ್ಯಮಂತ್ರಿಯವರಿಗೆ ಶೀಘ್ರದಲ್ಲಿಯೇ ಪ್ರಸ್ತಾವನೆ ಸಲ್ಲಿಸುವುದಾಗಿ ಸಚಿವರು ತಿಳಿಸಿದರು..
ಪರಿಶಿಷ್ಟರ ಕುಟುಂಬಗಳಿಗೆ ಉತ್ತಮ ಮನೆ, ಶೌಚಾಲಯ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಒದಗಿಸುವುದು, ವಿದ್ಯುತ್ ವ್ಯವಸ್ಥೆ, ಗುಣಮಟ್ಟದ ಆರೋಗ್ಯ ಸೌಕರ್ಯ ಒದಗಿಸುವುದು, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದರು.