ಬೆಂಗಳೂರು: ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಪಾಲಿಸದಿರುವ ಕೈಗಾರಿಕೆಗಳು, ಆಸ್ಪತ್ರೆಗಳು, ಕಲ್ಲು ಕ್ರಶರ್ ಗಳು, ಔಷಧಿ ತಯಾರಿಕಾ ಕಂಪನಿಗಳ ತಪಾಸಣೆ ಅಭಿಯಾನ ಆರಂಭಿಸುವುದಾಗಿ ಪರಿಸರ ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ಪ್ರಕಟಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆಯಲ್ಲಿರುವ ವಿವಿಧ ರೀತಿಯ ಕೈಗಾರಿಕೆಗಳು ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡದೇ ನದಿ-ಕೆರೆ ಸೇರಿದಂತೆ ಜಲ ಮೂಲಗಳಿಗೆ ನೇರವಾಗಿ ಹಾಕುತ್ತಿರುವುದು ಹಾಗೂ ಖಾಲಿ ಜಮೀನುಗಳಿಗೆ ತುಂಬುತ್ತಿರುವುದರ ಬಗ್ಗೆ ಅನೇಕ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಮುಂದಿನ ವಾರದಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡುವುದಾಗಿ ಸಚಿವ ಯೋಗೇಶ್ವರ್ ಹೇಳಿದ್ದಾರೆ.
ಯಾವುದೇ ರೀತಿಯ ಕೈಗಾರಿಕೆಗಳು ಪರಿಸರ ನಿಯಮಗಳನ್ನು ಉಲ್ಲಂಘಿಸಿದ್ದರೆ ಮುಲಾಜಿಲ್ಲದೇ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು. ತಪ್ಪಿತಸ್ಥ ಅಧಿಕಾರಿಗಳ ಮೇಲೂ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಧ್ಯಾಂತ ಪ್ರವಾಸ ಮಾಡಿ ವಿವಿಧ ರೀತಿಯ ಕೈಗಾರಿಕೆಗಳನ್ನು ತಾವೇ ಖುದ್ದಾಗಿ ಪರಿಶೀಲಿಸುವುದಾಗಿ ತಿಳಿಸಿದ ಅವರು, ಗಣಿ ಮತ್ತು ಭೂ-ವಿಜ್ಞಾನ ಇಲಾಖೆಯಲ್ಲಿ ಮರಳು, ಕಲ್ಲು, ಗ್ರ್ಯಾನೇಟ್ ಅನ್ನು ಸಾಗಿಸಲು ಪರ್ಮಿಟ್ ನೀಡುತ್ತಿದ್ದು, ಅದೇ ರೀತಿಯಲ್ಲಿ ಪರಿಸರ ಇಲಾಖೆಯಲ್ಲು ತ್ಯಾಜ್ಯವನ್ನು ವಿಲೇವಾರಿ ಮಾಡಲು ನಿಖರವಾದ ತೂಕ ಮಾಡಿ ಪರ್ಮಿಟ್ ನೀಡುವ ವ್ಯವಸ್ಥೆ ಜಾರಿಗೆ ತರುವುದಾಗಿ ಸಚಿವರು ತಿಳಿಸಿದರು.
ಪರಿಸರ ಇಲಾಖೆಯ ಅಧಿಕಾರಿಗಳು ಇನ್ನುಮುಂದೆ ಯಾವುದೇ ಮುಲಾಜಿಲ್ಲದೇ ನಿಯಮ ಉಲ್ಲಂಘಿಸುವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ತಾವು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ನೀಡುವುದಾಗಿ ಎಚ್ಚರಿಕೆ ನೀಡಿದರು.