ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಪ್ರಥಮ ಭಾರಿಗೆ ಮಂಡಿಸಿದ ಚೊಚ್ಚಲ ಬಜೆಟ್ ರಾಜ್ಯದ ಎಲ್ಲರನ್ನೂ ಒಳಗೊಂಡು ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ. ಆರ್ಥಿಕ ಶಿಸ್ತನ್ನು ಒಳಗೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವಲ್ಲಿ 2022-23ನೇ ಸಾಲಿನ ಬಜೆಟ್ ರಾಜ್ಯದ ಅಭಿವೃದ್ಧಿ ಮುನ್ನುಡಿ ಬರೆದಿದೆ ಎಂದು ಸಚಿವ ಭೈರತಿ ಬಸವರಾಜ್ ಪ್ರತಿಕ್ರಿಯಿಸಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಸಕ್ತ ಸಾಲಿನ ಆಯವ್ಯಯ ಹೆಚ್ಚು ಒತ್ತು ನೀಡಿದೆ ಎಂದಿದ್ದಾರೆ.
ರೈತರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರು ಸ್ವಾಭಿಮಾನದ ಜೀವನ ನಡೆಸಲು ಪೂರಕವಾದ ಕಾರ್ಯಕ್ರಮಗಳನ್ನು 2022-23ನೇ ಸಾಲಿನ ಬಜೆಟ್ ನಲ್ಲಿ ಬಸವರಾಜ ಎಸ್. ಬೊಮ್ಮಾಯಿ ನೀಡಿದ್ದಾರೆ. ಇದರಿಂದಾಗಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿ ನಾಡಿನ ಅಭಿವೃದ್ಧಿಗೂ ಪೂರಕವಾಗಲಿದೆ. ನಗರ ಪ್ರದೇಶಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು 2022-23ನೇ ಸಾಲಿನ ಬಜೆಟ್ ನಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಘೋಷಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆಯನ್ನು ಒಟ್ಟು ರೂ.3885 ಕೋಟಿ ರೂಪಾಯಿಗಳ ಮೊತ್ತದಲ್ಲಿ 2022-23ನೇ ಸಾಲಿನಿಂದ 2024-25ನೇ ಸಾಲಿನ ಅವಧಿಯಲ್ಲಿ ಅನುಷ್ಟಾನಗೊಳಿಸಲಾಗುವುದು. ರಾಜ್ಯದ ಆಯ್ದ ನಗರಗಳಲ್ಲಿ ನೀರಿನ ಸಂಪರ್ಕ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲು ಮುಂದಿನ 5 ವರ್ಷಗಳಲ್ಲಿ ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯನ್ನು ಅನುಷ್ಟಾನಗೊಳಿಸಲು ಕೇಂದ್ರ ಸರ್ಕಾರವು ರೂ. 4615 ಕೋಟಿಗಳನ್ನು ಹಂಚಿಕೆ ಮಾಡಿದ ಎಂದವರು ಹೇಳಿದ್ದಾರೆ.