ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಬಹುಕಾಲ ಉಳಿಯುವುದಿಲ್ಲ ಎಂದು ಪ್ರತಿಪಕ್ಷ ಬಿಜೆಪಿ ನಾಯಕರು ಭವಿಷ್ಯ ನುಡಿಯುತ್ತಿರುವಾಗಲೇ ಉಪಮುಖ್ಯಮತ್ರಿ ಡಿ.ಕೆ.ಶಿವಕುಮಾರ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬೆಂಗಳೂರಿನಲ್ಲಿ ಸಂಚು ರೂಪಿಸುವ ಬದಲು ವಿದೇಶದಲ್ಲಿ ಸಂಚು ರೂಪಿಸಲಾಗುತ್ತಿದೆ. ನನಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ ಕೆಲವರು ಸಿಂಗಾಪುರದಿಂದ ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಿದರೆ ಸಂಚು ಬಯಲಿಗೆ ಬರುವ ಸಾಧ್ಯತೆ ಇರುವುದರಿಂದ ಸಿಂಗಾಪುರದಲ್ಲಿ ತಂತ್ರ ಮಾಡಲಾಗಿದೆ” ಎಂದು ಡಿಸಿಎಂ ಹೇಳಿದರು. ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಡಿಕೆಶಿ ಪರೋಕ್ಷ ವಾಗ್ದಾಳಿ ನಡೆಸಿದರು.