ಬೆಂಗಳೂರು: ಮಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗಾಗಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಹಮ್ಮಿಕೊಂಡಿದ್ದ ವಿಶೇಷ ಲಸಿಕೆ ಅಭಿಯಾನಕ್ಕೆ ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ಚಾಲನೆ ನೀಡಿದರು.
ಇಡೀ ಬೆಂಗಳೂರು ನಗರದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಲಸಿಕೆ ಶಿಬಿರ ನಡೆಸಿದ್ದು ಇದೇ ಮೊದಲು. 66ನೇ ವಾರ್ಡ್‌ನಲ್ಲಿರುವ ಸಂಗೊಳ್ಳಿ ರಾಯಣ್ಣ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಲಸಿಕೆ ಶಿಬಿರಲ್ಲಿ ಮೊತ್ತ ಮೊದಲ ಬಾರಿಗೆ ಮಹಿಳೆಯರಿಗೆ ಮಾತ್ರ ಲಸಿಕೆ ನೀಡಲಾಯಿತು.
ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ವತಿಯಿಂದ 1500ಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನ್ ನೀಲಾಯಿತು ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ಶೀಘ್ರದಲ್ಲೇ ಶಾಲಾ-ಕಾಲೇಜುಗಳು ಆರಂಭವಾಗುತ್ತಿವೆ. ಮಕ್ಕಳು ಸೇರಿ ಮನೆಯವರೆಲ್ಲರ ಜವಾಬ್ದಾರಿ ಮಹಿಳೆಯರಿಗೇ ಹೆಚ್ಚು ಇರುತ್ತದೆ. ಹೀಗಾಗಿ ಅವರಿಗೆ ಪ್ರತ್ಯೇಕವಾಗಿ ಲಸಿಕೆ ಕೊಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಾವಿರಾರು ಮಹಿಳೆಯರು ಸಾಲಿನಲ್ಲಿ ಬಂದು ಲಸಿಕೆ ಪಡೆದರಲ್ಲದೆ, ಬಿಜೆಪಿ ಕಾರ್ಯಕರ್ತರು ಹಾಗೂ ಪಾಲಿಕೆ ಸಿಬ್ಬಂದಿ ಅಚ್ಚುಕಟ್ಟಾಗಿ ಎಲ್ಲ ವ್ಯವಸ್ಥೆ ಮಾಡಿದ್ದರು. ಇದೇ ವೇಳೆ ಡಿಸಿಎಂ ಅವರು ಮಹಿಳೆಯರ ಜತೆ ಮಾತನಾಡಿರಲ್ಲದೆ, ಲಸಿಕೆಯ ಮಹತ್ವವನ್ನು ಎಲ್ಲರಿಗೂ ತಿಳಿಸುವಂತೆ ಮನವಿ ಮಾಡಿದರು.