ಕೋಲಾರ: ರಾಜ್ಯಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಡ್ಡಮತದಾನಕ್ಕೆ ಪ್ರೇರಣೆ ನೀಡಿದ್ದಾರೆ ಎಂದು ಜೆಡಿಎಸ್ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ರಾಜ್ಯಸಭಾ ಚುನಾವಣಾ ಫಲಿತಾಂಶ ಕುರಿತಂತೆ ಕೋಲಾರದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿಸಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಎಂದರು. ಮೊದಲನೇ ಮತ ಬಿಜೆಪಿಗೆ, ಎರಡನೇ ಮತ ಕಾಂಗ್ರೆಸ್‌ಗೆ ಹಾಕಿಸಿದ್ದಾರೆ. ಈ ಚುನಾವಣೆಯನ್ನು ಗಮನಿಸಿದರೆ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳೆಂದು ಗೊತ್ತಾಗುತ್ತದೆ ಎಂದು ವ್ಯಂಗ್ಯವಾಡಿದರು.
ಈ ಅಡ್ಡಮತದಾನಕ್ಕೆ ಕಾರಣರಾದ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವಂತೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದರು.





































































