ನವದೆಹಲಿ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಅನರ್ಹತೆ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ಶುಕ್ರವಾರ ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿತು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಸ್ಥಾನವನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಂಪೂರ್ಣ ಆಸ್ತಿ ವಿವರಗಳನ್ನು ಘೋಷಿಸದಿರುವುದು ಹಾಗೂ ಕ್ರಿಮಿನಲ್ ಪ್ರಕರಣಗಳ ಮಾಹಿತಿಯನ್ನು ಮರೆಮಾಚಿರುವುದಾಗಿ ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023ರ ಜೂನ್ 24ರಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಹೈಕೋರ್ಟ್, ಆಸ್ತಿ ವಿವರಗಳ ಬಹಿರಂಗಪಡಿಸುವಲ್ಲಿ ಉಲ್ಲಂಘನೆ ನಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಅವರನ್ನು ಅನರ್ಹಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗ ಸೇರಿದಂತೆ ಪ್ರತಿವಾದಿಗಳಿಗೆ ಅಫಿಡವಿಟ್ ಮತ್ತು ಕೌಂಟರ್ ಅಫಿಡವಿಟ್ ಸಲ್ಲಿಸಲು ಆರು ವಾರಗಳ ಕಾಲಾವಕಾಶ ನೀಡಿದೆ. ಮುಂದಿನ ಆದೇಶದವರೆಗೂ ಸುಬ್ಬಾರೆಡ್ಡಿ ಅವರು ಶಾಸಕರಾಗಿ ಮುಂದುವರಿಯಲಿದ್ದಾರೆ.






















































