ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಏಪ್ರಿಲ್ ಒಂದರಂದು ಅರಮನೆ ಮೈದಾನದಲ್ಲಿ ಉದ್ಘಾಟಿಸಲಿರುವ ಸಹಕಾರ ಕಾರ್ಯಕ್ರಮದ ವೇದಿಕೆ ಸಿದ್ಧತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಪರಿಶೀಲಿಸಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಸಚಿವರು, ಶಾಸಕರು, ಸಂಸದರು ಹಾಗೂ ಸಹಕಾರಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ವಾಹನ ನಿಲುಗಡೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ಬಿ. ಸಿ. ಪಾಟೀಲ್, ಎಸ್. ಟಿ. ಸೋಮಶೇಖರ್ , ಶಾಸಕರಾದ ನಾಗೇಂದ್ರ, ರಾಜಕುಮಾರ್ ಪಾಟೀಲ್ ತೆಲ್ಕೂರ್, ಮಾಡಾಳ್ ವಿರುಪಾಕ್ಷಪ್ಪ, ಪೊಲೀಸ್ ಕಮಿಷನರ್ ಕಮಲ್ ಪಂತ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.