ನವದೆಹಲಿ: ದಕ್ಷಿಣ ಭಾರತದಲ್ಲಿ ಈಶಾನ್ಯ ಮಾನ್ಸೂನ್ ಮಳೆ ಆರಂಭವಾಗುವ ನಿರೀಕ್ಷೆಯಿದ್ದು, ಅಕ್ಟೋಬರ್ 15ರಿಂದ 18ರವರೆಗೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಕೇರಳ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿಯೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳು ಹಾಗೂ ರಾಯಲಸೀಮಾದಲ್ಲಿ ಅ. 15ರಿಂದ 18ರ ನಡುವೆ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಇದೇ ವೇಳೆ, ಉತ್ತರ ಭಾರತದ ಕೆಲವು ಭಾಗಗಳಲ್ಲಿಯೂ ಹವಾಮಾನದಲ್ಲಿ ಬದಲಾವಣೆಯಾಗುವ ಮುನ್ಸೂಚನೆ ಇದೆ. ದೆಹಲಿ–ಎನ್‌ಸಿಆರ್‌ನಲ್ಲಿ ಅಕ್ಟೋಬರ್ 12ರಿಂದ 15ರವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಪಂಜಾಬ್ ಮತ್ತು ಹರಿಯಾಣದಲ್ಲಿಯೂ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ.
ಈ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವು ಕಡೆ ಗಾಳಿಯ ವೇಗ ಗಂಟೆಗೆ 60 ಕಿ.ಮೀ. ತಲುಪಬಹುದು ಎಂದು ಮುನ್ಸೂಚನೆಯಲ್ಲಿ ಹೇಳಲಾಗಿದೆ.
ದೇಶದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಜನರು ಸ್ಥಳೀಯ ಹವಾಮಾನ ಇಲಾಖೆಯ ಮುನ್ಸೂಚನೆ ಮತ್ತು ಮುನ್ನೆಚ್ಚರಿಕೆಗಳನ್ನು ಗಮನಿಸುವಂತೆ ಸೂಚಿಸಲಾಗಿದೆ.















































































