ಬೆಳಗಾವಿ: ಬಹುದಿನದ ಬೇಡಿಕೆಯಾದ ಕರಗಾಂವ್ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿದ ಅವರು, ಈ ಭಾಗದ ಇನ್ನೆರಡು ಏತ ನೀರಾವರಿ ಯೋಜನೆಗಳನ್ನು ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು. ಬೆಳಗಾವಿಯಲ್ಲಿ ನೀರಾವರಿ ಯೋಜನೆ , ಕೈಗಾರಿಕೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ ಈ ಎರಡು ನಿರಾವರಿ ಯೊಜನೆಗಳನ್ನು ಜಾರಿಗೆ ತರಲಾಗುವುದು ಎಂದರು.
ಮುಂಬೈ ಚೆನ್ನೈ ಕೈಗಾರಿಕಾ ಕಾರಿಡಾರ್ ಯೋಜನೆಯಿಂದ ಚಿಕ್ಕೋಡಿ ಭಾಗದಲ್ಲಿ ಔದ್ಯೋಗಿಕ ಕ್ರಾಂತಿ ಆಗಲಿದೆ. ಮಹಾರಾಷ್ಟ್ರ, ಗೋವಾ ಸೇರಿಸುವ ರಸ್ತೆಗಳ ಅಭಿವೃದ್ದಿಗೊಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ದುರ್ಯೋಧನ ಐಹೊಳೆ, ಪಿ. ರಾಜೀವ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರವಿಕುಮಾರ್, ಮಾಜಿ ಸಂಸದರಾದ ರಮೇಶ್ ಕತ್ತಿ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ ಮತ್ತಿತರರು ಹಾಜರಿದ್ದರು.