ಬೆಂಗಳೂರು, ಜುಲೈ 14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17ರಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಮೂರು ದಿನಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ತೀವ್ರಗೊಳ್ಳುವ ಲಕ್ಷಣಗಳಿವೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಇತರ ಜಿಲ್ಲೆಗಳಲ್ಲಿ ಮಳೆಯ ಸಂಭವ
ರಾಜ್ಯದ ಇತರ ಭಾಗಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ತೀವ್ರತೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಒಳನಾಡು ಪ್ರದೇಶದ ನಾಗರಿಕರಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ. ಕಡಲ ತೀರದ ಮೀನುಗಾರರು ಸಮುದ್ರ ಪ್ರವೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಸಲಹೆ ನೀಡಲಾಗಿದೆ.