ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗಾಢ ಶೋಕ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ಬಸ್ ಅಗ್ನಿ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ ಎಂದಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡಾ ದುಃಖ ವ್ಯಕ್ತಪಡಿಸಿದ್ದಾರೆ. ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ ಸಾಂತ್ವನ ಹೇಳಿ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಪ್ರಧಾನಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಇದೇ ವೇಳೆ ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ಪ್ರಧಾನಿಯವರು ಪ್ರಕಟಿಸಿದ್ದಾರೆ.





















































