ಬೆಂಗಳೂರು: ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದ್ದಾರೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ. ಇದರ ಜತೆಗೆ ನಾವು ನೀಡಿರುವ ಇತರೆ ಭರವಸೆಗಳನ್ನು ಜಾರಿ ಮಾಡುತ್ತೇವೆ. ಕಳೆದ ಬಾರಿಯ ಸರ್ಕಾರ ಇದ್ದಾಗಲೂ ನಾವು ಹೇಳಿದ್ದನ್ನು ಮಾಡಿ ತೋರಿಸಿದ್ದೇವೆ. ನಾವು ಬಿಜೆಪಿಯವರ ರೀತಿ ಹೇಳುವುದೊಂದು ಮಾಡುವುದು ಮತ್ತೊಂದು ರೀತಿ ಆಡಳಿತ ಮಾಡುವುದಿಲ್ಲ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ ಎಂದರು.
ಪ್ರಧಾನಿ ಮೋದಿ ಅವರು ಈಗ ಮತ್ತೊಂದು ಆದೇಶ ಹೊರಡಿಸಿದ್ದಾರೆ. ಅವರು ಜಪಾನ್ ಗೆ ತೆರಳಿದಾಗಲೆಲ್ಲಾ ನೋಟು ರದ್ದು ತೀರ್ಮಾನ ಪ್ರಕಟಿಸುತ್ತಾರೆ. ಕಳೆದ ಬಾರಿ ಜಪಾನ್ ಗೆ ತೆರಳಿದಾಗ ಒಂದು ಸಾವಿರ ರೂ. ಮುಖಬೆಲೆ ನೋಟು ರದ್ದು ಮಾಡಿದ್ದರು. ಈ ಬಾರಿ 2 ಸಾವಿರ ಮುಖಬೆಲೆಯ ನೋಟು ರದ್ದು ಮಾಡಿದ್ದಾರೆ. ಇದರರ್ಥ ಇದರಿಂದ ದೇಶಕ್ಕೆ ಲಾಭವೋ, ನಷ್ಟವೋ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದಿಲ್ಲ. ಮೋದಿ ಅವರ ಈ ಕೆಲಸ ದೇಶದ ಜನರಿಗೆ ತೊಂದರೆ ಆಗುತ್ತಿದೆ ಎಂದವರು ಹೇಳಿದರು.
ನಮ್ಮ ಸರ್ಕಾರ ರಾಜ್ಯದಲ್ಲಿ ದ್ವೇಷವನ್ನು ಕಿತ್ತೊಗೆದು, ಪ್ರೀತಿ, ಸೌಹಾರ್ದತೆ, ಸಾಮರಸ್ಯದ ಸರ್ಕಾರವಾಗಿದೆ. ನಾವು ನುಡಿದಂತೆ ನಡೆಯುತ್ತೇವೆ. ನಮ್ಮ ಭರವಸೆ ಈಡೇರಿಸುತ್ತೇವೆ ಎಂದರು.