ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಕಿಡುಗೇಡಿಗಳು ಮೂರು ಹಸುಗಳ ಕೆಚ್ಚಲು ಕತ್ತರಿಸಿರುವ ಕೃತ್ಯದಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಕೃತ್ಯವನ್ನು ಖಂಡಿಸಿರುವ ಪ್ರತಿಪಕ್ಷ ನಾಯಕರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಆದೇಶಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಸೂಚಿಸಿದ್ದೇನೆ. ಯಾರೇ ಕೃತ್ಯ ಎಸಗಿದ್ದರು ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಿಂದೂ ಸಂಘಟನೆಗಳು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.