ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ವಿಧಾನಸೌಧ ಸಭಾಂಗಣದಲ್ಲಿ ಭಾನುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಆರ್, ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ಕಾತರಕಿ, ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಲಾಯಿತು.
ಸಭೆಯ ಬಳಿಕ ಸುದದಿಗಾರರಿಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, 11-7-2024ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 3ನೇ ಸಭೆ ನಡೆದು, ಜುಲೈ 12ರಂದು ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 ಟಿಎಂಸಿ ಯಂತೆ 20 ಟಿಎಂಸಿ ನೀರು ಬಿಡಲು ಆದೇಶಿಸಿದ್ದಾರೆ. ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, ಜುಲೈನಲ್ಲಿ 31.24 ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5 ಟಿಎಂಸಿ ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ ಎಂದರು.
ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜುಲೈ 12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು. ಅದರಂತೆ, ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ತಿಳಿಸಿದರು.
ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63% ಮಾತ್ರ ಭರ್ತಿ ನೀರು ಆಗಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಭಾನುವಾರ 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ ಎಂದು ಮಾಹಿತಿ ಹಂಚಿಕೊಂಡರು.
ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಮಾಡುತ್ತಿದ್ದೇವೆ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.