ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ಮಾಡುವಲ್ಲಿ ತಾರತಮ್ಯವಾಗುತ್ತಿದ್ದು, ಕರ್ನಾಟಕಕ್ಕೆ ಭಾರೀ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದ್ದರೂ ನಮಗೆ ತೆರಿಗೆ ಹಂಚಿಕೆಯಲ್ಲಿ ಮೋಸವಾಗುತ್ತಿದೆ ಎಂದು ದೂರಿದರು. ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದ ಸಿದ್ದರಾಮಯ್ಯ, ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ತೆರಿಗೆ ಹಣವನ್ನು ನೀಡದಿರುವುದನ್ನು ಖಂಡಿಸುವುದಾಗಿ ಹೇಳಿದರು.
ನಾವು ಕೇಂದ್ರ ಸರ್ಕಾರಕ್ಕೆ 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ. 12-13ರಷ್ಟು ವಾಪಸ್ ಬರುತ್ತಿದೆ. ಆದರೂ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ ಎಂದು ಸಿಎಂ ಅವರು ಕಮಲ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ ಹಾಗಾಗಿ ಕೇಂದ್ರದ ತಾರತಮ್ಯ ವಿರುದ್ಧ ಫೆಬ್ರವರಿ 7ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ನಡೆಸಲಾಗುವುದು ಎಂದ ಅವರು, ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ ಎಂದರು.