ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನ ಸೆಪ್ಟೆಂಬರ್ 17ರ ವರೆಗೆ ವಿಸ್ತರಣೆಯಾಗಿದೆ.
ನಟ ದರ್ಶನ್, ಪವಿತ್ರಾಗೌಡ ಸಹಿತ ಎಲ್ಲಾ 17 ಆರೋಪಿಗಳನ್ನುಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಬಳ್ಳಾರಿ ಜೈಲಿನಿಂದ ದರ್ಶನ್, ತುಮಕೂರು ಜೈಲಿನಿಂದ ಅನುಕುಮಾರ್, ಜಗದೀಶ್, ರವಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದರೆ, ಪವಿತ್ರಾಗೌಡ, ದೀಪಕ್ ನನ್ನ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರುಪಡಿಸಲಾಯಿತು.
ಈ ಸಂದರ್ಭದಲ್ಲಿ ಆರೋಪಿಗಳ ಪರ ಹಾಗೂ ಪ್ರಾಸಿಕ್ಯೂಷನ್ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 17ರವರೆಗೆ ವಿಸ್ತರಿಸಿ ಆದೇಶಿಸಿದರು.