ನವದೆಹಲಿ: ನೀಟ್-ಯುಜಿ ಪರೀಕ್ಷೆ ಅಕ್ರಮ ಆರೋಪಗಳ ನಡುವೆಯೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಎನ್ಟಿಎಯ ಕಾರ್ಯವೈಖರಿಯನ್ನು ಸಂಪೂರ್ಣವಾಗಿ ಸುಧಾರಿಸುವ ಪ್ರಕ್ರಿಯೆಯ ಭಾಗವಾಗಿ ಇನ್ನೂ ಕೆಲವು ಅಧಿಕಾರಿಗಳ ವಿರುದ್ಧವೂ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಬಳಿಕ ಎನ್ಟಿಎ ತೀವ್ರ ಟೀಕೆಗೆ ಗುರಿಯಾಗಿದ್ದು, ಸಂಸ್ಥೆಯ ಪುನರ್ರಚನೆಗೆ ಆಗ್ರಹಗಳು ಕೇಳಿಬಂದಿದ್ದವು. ಆದರೆ, ಎನ್ಟಿಎಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಇದೇ ವೇಳೆ, ನೀಟ್ ಪರೀಕ್ಷೆ ಅಕ್ರಮವನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸೇರಿದಂತೆ ಕೆಲವು ಸಂಘಟನೆಗಳು ಪ್ರತಿಭಟನೆ ಮುಂದುವರಿಸಿವೆ.
ಇನ್ನೊಂದೆಡೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸುವ ಕರಡು ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಒಪ್ಪಿಗೆ ನೀಡಲಾಗಿದ್ದು, ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ.
ಪ್ರಸ್ತಾವಿತ ತಿದ್ದುಪಡಿ ಪ್ರಕಾರ, ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಂಬಂಧಿತ ಅಕ್ರಮಗಳಲ್ಲಿ ಭಾಗಿಯಾಗುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಗರಿಷ್ಠ 10 ಕೋಟಿ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.





































































