ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಶಸ್ವಿ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಂತರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
ಕಾಂಗ್ರೆಸ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರು ಆರೋಗ್ಯವಾಗಿದ್ದಾರೆ ಮತ್ತು ಎಲ್ಲರ ಶುಭ ಹಾರೈಕೆಗಳಿಗೆ ಧನ್ಯವಾದಗಳು” ಎಂದು ಹೇಳಲಾಗಿದೆ.
ಖರ್ಗೆ ಆಯಾಸ ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದುದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆಯಂತೆ ಅವರು ಶೀಘ್ರವೇ ತಮ್ಮ ಚಟುವಟಿಕೆಗಳನ್ನು ಪುನರಾರಂಭಿಸಬಹುದು ಎಂದು ತಿಳಿಸಲಾಗಿದೆ.
ಈ ಕುರಿತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಮಾಧ್ಯಮದೊಂದಿಗೆ ಮಾತನಾಡಿ, ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ಸಣ್ಣ ಪ್ರಕ್ರಿಯೆಯಾಗಿತ್ತು. ಚಿಕಿತ್ಸೆ ಬಳಿಕ ಅವರು ಸ್ಥಿರರಾಗಿದ್ದಾರೆ. ಅಕ್ಟೋಬರ್ 3ರಿಂದ ತಮ್ಮ ಕರ್ತವ್ಯವನ್ನು ಪುನರಾರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಖರ್ಗೆಯೊಂದಿಗೆ ಮಾತನಾಡಿ ಶೀಘ್ರ ಗುಣಮುಖರಾಗುದುವಂತೆ ಹಾರೈಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಖರ್ಗೆಯನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ..