ಬೆಂಗಳೂರು: ಪೊಕ್ಸೋ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಬಂಧನ ಭೀತಿಯಿಂದ ದೂರವಾಗಿದ್ದಾರೆ. ತನಿಖೆಗೆ ಹಾಜರಾಗುವ ವರೆಗೆ ಯಾಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶಿಸಿದೆ.
ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಪೊಲೀಸರು ನೋಟೀಸ್ ನೀಡಿದ್ದರೂ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಆದರೆ ಅದಾಗಲೇ ಪೊಲೀಸರು ನ್ಯಾಯಾಲಯದ ಆದೇಶದಂತೆ ವಾರೆಂಟ್ ಸಿದ್ದಪಡಿಸಿದ್ದರು.
ಈ ನಡುವೆ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ ಹಾಗೂ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಕುರಿತಂತೆ ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದೆ. ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಮತ್ತು ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ನೀಡಿದ್ದ ಬಿಎಸ್‌ವೈ ವಿರುದ್ಧದ ಬಂಧನ ವಾರಂಟ್ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್, ಜೂನ್ 17ರಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಬೇಕೆಂದು ಯಡಿಯೂರಪ್ಪ ಅವರಿಗೆ ಸೂಚಿಸಿದೆ.