ಬೆಂಗಳೂರು: ಕನ್ನಡ ಚಿತ್ರರಂಗದ ‘ಕನಸಿನ ರಾಣಿ’ ಮಾಲಾಶ್ರೀ ಹಾಗೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಟಿ ರುಕ್ಮಿಣಿ ವಸಂತ್ ಇದೇ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರಕ್ಕೆ ‘ಮಂಗಳಗೌರಿ’ ಎಂಬ ಶೀರ್ಷಿಕೆ ಇಡಲಾಗಿದೆ.
ಗೌರಿ–ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಶೀರ್ಷಿಕೆಯನ್ನು ಬಿಡುಗಡೆ ಮಾಡಿದೆ. ಪೋಸ್ಟರ್‌ನಲ್ಲಿ ರುಕ್ಮಿಣಿ ವಸಂತ್ ಪೊಲೀಸ್ ಅಧಿಕಾರಿಯ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿಸಿದೆ.

ಬಿಗ್ ಬಜೆಟ್‌ನಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಹೇಮಂತ್ ಎಂ. ರಾವ್ ಅವರ ದಾಕ್ಷಾಯಣಿ ಟಾಕೀಸ್ ಜಂಟಿಯಾಗಿ ನಿರ್ಮಿಸುತ್ತಿವೆ. ರಾಹುಲ್ ಪಿ.ಕೆ ನಿರ್ದೇಶಕರಾಗಿ ಕೈಜೋಡಿಸಿದ್ದಾರೆ.
ಮಾಲಾಶ್ರೀ ಅವರ ಅನುಭವ ಹಾಗೂ ರುಕ್ಮಿಣಿ ವಸಂತ್ ಅವರ ಹೊಸ ತಲೆಮಾರಿನ ಜನಪ್ರಿಯತೆಯ ಸಂಗಮವಾಗಿರುವ ‘ಮಂಗಳಗೌರಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗುತ್ತಿದ್ದಂತೆಯೇ ಸಿನಿಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿಸಿದೆ.






































































