ಬೆಳಗಾವಿ: ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದೆ. ಗುರುವಾರವೂ ಹಲವೆಡೆ ಭಾರೀ ಮಳೆಯಾಗಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಸಹಿತ ವಿವಿಧೆಡೆ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸಿದೆ.
ಇದೇ ವೇಳೆ, ರಾಯಬಾಗ ಪಟ್ಟಣದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೆಬ್ಬಾಳ ಗ್ರಾಮದಲ್ಲೂ ಅದೇ ರೀತಿಯ ಘಟನೆ ಸಂಭವಿಸಿದೆ. ಕುರಿಮೇಯಿಸುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಒಬ್ಬ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ದುರ್ಘಟನೆಯಲ್ಲಿ 12 ಕುರಿಗಳು ಸಾವನ್ನಪ್ಪಿವೆ.







































































