ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಇದೀಗ ಕಾನೂನು ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ ಕಾಂಗ್ರೆಸ್ ನಾಯಕರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ.
ಮೇಕೆದಾಟು ಪಾದಯಾತ್ರೆ ನಡೆಸುವ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ದ ಆರೋಪದಡಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಹೊರಡಿಸಿದೆ.
ಜನವರಿ 9ರಂದು ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪಾದಯಾತ್ರೆ ಆಕ್ಷೇಪಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು. ಬಳಿಕ ಹೈಕೋರ್ಟ್ ಸೂಚನೆಯಂತೆ ಜ.13ರಂದು ರಾಮನಗರದಲ್ಲಿ ಪಾದಯಾತ್ರೆ ಸ್ಥಗಿತಗೊಳಿಸಿದ್ದರು.
ಇದೇ ವೇಳೆ, ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ರಾಮನಗರ ಪೊಲೀಸರು ವಿಪತ್ತು ನಿರ್ವಹಣಾ ತಡೆ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಇದೀಗ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ನೀಡಿದೆ.

























































