ಬೆಂಗಳೂರು: ರಾಜ್ಯದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಚುರುಕುಗೊಂಡ ಹಿನ್ನೆಲೆಯಲ್ಲಿ, ಜೂನ್ 16ರ ವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಬಿಸಿಲು-ಮಳೆಯ ಜತೆಯ ವಾತಾವರಣ ಮುಂದುವರೆಯುವ ನಿರೀಕ್ಷೆ ಇದೆ. ಇದೇ ವೇಳೆ, ಜೂನ್ 15ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 17ರಿಂದ ಮಳೆಯ ತೀವ್ರತೆ ಸ್ವಲ್ಪ ಇಳಿಮುಖವಾಗಲಿದ್ದು, ಜೂನ್ 18ರ ವರೆಗೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.
ಕರ್ನಾಟಕದ ಇತರ ಭಾಗಗಳಲ್ಲಿಯೂ, ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ವ್ಯಕ್ತವಾಗಿದ್ದು, ಕರಾವಳಿ ಭಾಗಗಳಿಗೆ ಎಚ್ಚರಿಕೆಯನ್ನು ಕೋರಲಾಗಿದೆ.















































































