ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ ಭಾರೀ ಮಳೆಯಾಗಿದೆ. ಬೆಂಗಳೂರು, ಧಾರವಾಡ, ಬೆಳಗಾವಿ, ಗದಗ್, ಬೀದರ್ ಸಹಿತ ಹಲವೆಡೆ ಭಾರೀ ಮಳೆಯಾಗಿದ್ದು, ಸರಣಿ ಘಟನೆಗಳಲ್ಲಿ 8 ಮಂದಿ ಬಲಿಯಾಗಿದ್ದಾರೆ.
ಕೊಪ್ಪಳದಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಿಡಿಲಿಗೆ ಬಲಿಯಾಗಿದ್ದರೆ, ವಿಜಯಪುರ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲೂ ವರುಣ ಅಬ್ಬರಿಸಿದ್ದು, ಗೋಕಾಕ್ನಲ್ಲಿ ವ್ಯಕ್ತಿಯೊಬ್ಬರು ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಗದಗ ಸಮೀಪ ಬೆನಕೊಪ್ಪ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಬೈಕ್ ಸವಾರ ಕೊಚ್ಚಿಕೊಂಡು ಹೋಗಿದ್ದಾನೆ. ಗದಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಹಾರವಾಡ ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲೂ ಮಳೆ ಅವಾಂತರ ಸೃಷ್ಟಿಸಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ ಸುತ್ತಮುತ್ತ ಮಳೆಯಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನ ಹಲವೆಡೆ ಮರಗಳು ಧರೆಗುರುಳಿವೆ.