ಬೆಂಗಳೂರು: ರಾಜ್ಯದ ಹಲವೆಡೆ ಜುಲೈ 18ರಿಂದ ಮೂರು ದಿನಗಳು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಇದರಿಂದಾಗಿ ಈ ಪ್ರದೇಶಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಅರಬ್ಬಿ ಸಮುದ್ರದ ಮೇಲೆ ಮತ್ತೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಜು.18 ಮತ್ತು 19ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಾಸನ ಜಿಲ್ಲೆಯಲ್ಲಿ ಜುಲೈ 18ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಜಿಲ್ಲೆಯ ಕೆಲವೊಂದು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಇದರಿಂದಾಗಿ ನದಿ, ಕೆರೆ, ಕಟ್ಟೆಗಳ ಹತ್ತಿರ ಜನರು ಒಯ್ಯದಿರಲು ಹಾಗೂ ಜಾನುವಾರುಗಳನ್ನು ಬಿಡದಿರಲು ಸಾರ್ವಜನಿಕರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.