ಲಖನೌ; “ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮಾತನಾಡಿದರು. “ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು ಎಂದರು.
ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡುತ್ತಿದ್ದೇವೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಿಸಿದೆವು. ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬಗಳಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದೇವೆ. ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆ ಘೋಷಿಸಿದೆವು ಎಂದು ತಿಳಿಸಿದರು.
ಕರ್ನಾಟಕದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಮೂಲಕ 2 ಸಾವಿರ ಹಣ ಪಡೆಯುತ್ತಿದ್ದಾರೆ. 1.50 ಕೋಟಿ ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾಯಿತು. ತೆಲಂಗಾಣ ಚುನಾವಣೆದಲ್ಲೂ 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಆ ಪೈಕಿ ಬಹುತೇಕ ಜಾರಿಯಾಗಿವೆ. ಕೆಲವು ಜಾರಿ ಪ್ರಕ್ರಿಯೆಯಲ್ಲಿವೆ ಎಂದರು.





















































