ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶ, ನಮ್ಮ ಪಕ್ಷ ಕರ್ನಾಟಕದ ಮೇಲೆ ಬಹಳ ವಿಶ್ವಾಸ ಇಟ್ಟುಕೊಂಡಿದ್ದು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇಂದಿರಾಭವನದಲ್ಲಿ ನಡೆದ ಪಕ್ಷದ ಸಭೆ, ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಜನರಿಗೆ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ನಮ್ಮ ಕಾರ್ಯಕರ್ತರು ಮತ್ತೆ ಜನರ ಬಳಿಗೆ ಹೋಗಲು ಆತ್ಮವಿಶ್ವಾಸ ತುಂಬಿದ್ದೇವೆ. ಈ ಹಿಂದೆ ದೇಶದಲ್ಲಿ ಯಾವ ಸರ್ಕಾರವೂ ಕೊಟ್ಟ ಮಾತನ್ನು ಏಳೇ ತಿಂಗಳಲ್ಲಿ ಪೂರ್ಣಗೊಳಿಸಿರಲಿಲ್ಲ. ನಾಲ್ಕು ಗ್ಯಾರಂಟಿ ಜನರನ್ನು ತಲುಪಿದ್ದು, ಐದನೇ ಗ್ಯಾರಂಟಿ ಯುವನಿಧಿಗೆ ಇದೇ 12 ರಂದು ವಿವೇಕಾನಂದರ ಜಯಂತಿ ದಿನ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದೇವೆ ಎಂದರು.
ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಹೊಸ ಸ್ವರೂಪದ ಕಾರ್ಯಕ್ರಮ ರೂಪಿಸಿದ್ದೇವೆ. ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಿ ಪಾರದರ್ಶಕತೆ ಕಾಪಾಡಿಕೊಂಡಿದ್ದೇವೆ. ರಾಜ್ಯದ ಶೇ.80 ರಷ್ಟು ಕುಟುಂಬಗಳಿಗೆ ಈ ಯೋಜನೆ ತಲುಪಿದ್ದು, 3 ಕೋಟಿಗೂ ಹೆಚ್ಚು ಜನ ಇದರ ಫಲಾನುಭವಿಗಳಾಗಿದ್ದಾರೆ ಎಂದರು.
ಇದೇ 21 ರಂದು ರಾಜ್ಯದ ಕಾರ್ಯಕರ್ತರ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷರು ಸೂಚಿಸಿದ್ದಾರೆ. ಶಾಸಕರು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಮುಖಂಡರು, ಸಹಕಾರ ಸಂಸ್ಥೆಗಳ ಪ್ರತಿನಿಧಿಗಳು, ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದವರು, ಸೋತವರು, ಬೂತ್ ಮಟ್ಟದ ಪ್ರತಿನಿಧಿಗಳನ್ನು ಸೇರಿಸಿ ಈ ಸಮಾವೇಶ ಮಾಡಲು ತಿಳಿಸಿದ್ದು, ಕಾರ್ಯಕ್ರಮ ಸ್ಥಳದ ಬಗ್ಗೆ ಎರಡು ದಿನಗಳಲ್ಲಿ ತಿಳಿಸುತ್ತೇವೆ ಎಂದರು.
ಸಂಸತ್ ಚುನಾವಣೆ ದೃಷ್ಟಿಯಿಂದ ಪ್ರತಿ ಜಿಲ್ಲೆಗೂ ಓರ್ವ ಸಚಿವರಿಗೆ ಜವಾಬ್ದಾರಿ ನೀಡಿದ್ದೇವೆ. ಅವರ ಕೈಕೆಳಗೆ ಉಪಾಧ್ಯಕ್ಷರು, ಪ್ರಧಾನಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ನಿಯೋಜಿಸಿದ್ದೇವೆ. ಬ್ಲಾಕ್ ಮಟ್ಟದಲ್ಲಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಮತದಾರರ ಪಟ್ಟಿ ಪರಿಷ್ಕರಣೆ, ಬಿಎಲ್ಎಗಳ ನೇಮಕ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಸಂಘಟನೆಗಳು, ಬ್ಲಾಕ್ ಮಟ್ಟದಲ್ಲಿ ಬದಲಾವಣೆ ಮಾಡಿ ಆದಷ್ಟು ಬೇಗ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದೇವೆ ಎಂದು ಡಿಕೆಶಿ ತಿಳಿಸಿದರು.


























































