ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ಜಯಭೇರಿ ಬಾರಿಸಿ ಲೋಕಸಭೆ ಪ್ರವೇಶಿಸಿದ್ದಾರೆ.
ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ಪ್ರಿಯಾಂಕ ಸೋದರ ರಾಹುಲ್ ರಾಜೀನಾಮೆಯಿಂದ ತೆರವಾಗಿರುವ ವಯನಾಡ್ ಕ್ಷೇತ್ರದಿಂದ ಅಖಾಡಕ್ಕಿಳಿದಿದ್ದರು. ನಿರೀಕ್ಷೆಯಂತೆ ಅವರು ಜಯಗಳಿಸಿದ್ದಾರೆ.
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ, ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಹಿರಿಯ ನಾಯಕ ಸತ್ಯನ್ ಮೊಕೇರಿ ಕಣಕ್ಕಿಳಿದಿದ್ದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಸ್ಪರ್ಧಿಸಿದ್ದರು.
ಕಾಂಗ್ರೆಸ್ ಹುರಿಯಾಳು ಪ್ರಿಯಾಂಕಾ ವಾದ್ರಾ ಅವರು 6 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ರಾಹುಲ್ ಗಾಂಧಿ ಅವರು ಈ ಹಿಂದೆ 3.64 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.