ವಯನಾಡ್: ಮುಂಗಾರು ಮಳೆ ಸರಣಿ ಅವಘಡಗಳಿಗೆ ಸಾಕ್ಚಿಯಾಗುತ್ತಿದ್ದು ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 100 ದಾಟಿದೆ.
ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. 400ಕ್ಕೂ ಹೆಚ್ಚು ಕುಟುಂಬಗಳು ದುರಂತದಿಂದ ಸಂಕಷ್ಟಕ್ಕೆ ಸಿಲುಕಿವೆ ಎಂದು ಹೇಳಲಾಗುತ್ತಿದೆ.
ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು ಹಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಆಘಾತ ವ್ಯಕ್ತಪಡಿಸಿದ್ದು, ಕುಟುಂಬಸ್ಥರನ್ನು, ತಮ್ಮವರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಸೂಕ್ತ ರಕ್ಷಣಾ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಎಲ್ಲಾ ರೀತಿಯಲ್ಲಿಯೂ ನೆರವು ಒದಗಿಸಲಿದೆ ಎಂದವರು ಭರವಸೆ ನೀಡಿದ್ದಾರೆ.