ನವದೆಹಲಿ: ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ಇಂಡಿಯಾ ಒಕ್ಕೂಟದ ‘ವೋಟ್ ಬಚಾವೋ–ದೇಶ ಬಚಾವೋ’ ರ್ಯಾಲಿಯಲ್ಲಿ ವಿರೋಧ ಪಕ್ಷದ ನಾಯಕರು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸುವ ಮತ್ತು ತೆಗೆದುಹಾಕುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.
ಸಂವಿಧಾನವು ಯಾವುದೇ ರಾಜಕೀಯ ನಾಯಕರಿಗಿಂತ ದೊಡ್ಡದು ಎಂದು ಹೇಳಿದ ರಾಹುಲ್ ಗಾಂಧಿ, ಹಲವು ರಾಜ್ಯಗಳಲ್ಲಿ ಚುನಾವಣಾ ಅಕ್ರಮಗಳು ನಡೆದಿವೆ ಎಂದು ದೂರಿದರು. ಇದಕ್ಕೆ ಹೊಣೆಗಾರರಾದವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧವೂ ವಾಗ್ದಾಳಿ ನಡೆಸಿದರು.














































































