ಬೆಂಗಳೂರು: “ಕಾಡು ಕುದುರೆ ಓಡಿ ಬಂದಿತ್ತಾ” ಗೀತೆ ಖ್ಯಾತಿಯ, ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ವಿಷಯ ತಿಳಿದು ಬೇಸರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಸಿನಿಮಾ ರಂಗಕ್ಕೆ ಸುಬ್ಬಣ್ಣರವರು ಹಿನ್ನೆಲೆ ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದ್ದು ನಾಟಕಕಾರ, ಚಿತ್ರ ನಿರ್ದೇಶಕ ಕವಿ ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಮೂಲಕ. 1979ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ ಸುಬ್ಬಣ್ಣ ಯಶಸ್ಸಿನ ಕುದುರೆಯೇರಿ ನಡೆದರು. ಆಕಾಶವಾಣಿ ಎಂ.ಎಸ್.ಐ.ಎಲ್. ಪ್ರಾಯೋಜಕತ್ವದಲ್ಲಿ ಪ್ರಸಾರ ಮಾಡಿದ ಜನಪ್ರಿಯ ಕಾರ್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮಾತಾದವರು ಎಂದು ಸ್ಮರಿಸಿದ್ದಾರೆ.
ಸುಬ್ಬಣ್ಣ ಅವರ ಸಾಧನೆಯನ್ನು ಮನ್ನಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ಅಕಾಡೆÀಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ನೀಡಿ ಗೌರವಿಸಿವೆ. ಅವರ ಅಭಿಮಾನಿಗಳು ನೂರಾರು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದ್ದಾರೆ. 1974ರಲ್ಲಿ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಸಂದ ‘ರಜತ ಕಮಲ್’ ಪುರಸ್ಕಾರವನ್ನು ಪಡೆದ ಹೆಗ್ಗಳಿಕೆ ಇವರದು ಎಂದು ತಿಳಿಸಿದ್ದಾರೆ.
ಅವರ ಕುಟುಂಬದವರು, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಭಗವಂತನು ನೀಡಲಿ ಎಂದು ಕೋರಿದ್ದಾರೆ.























































