ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದ್ದಾರೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಿ ಅವರು ಆದೇಶ ಹೊರಡಿಸಿದ್ದಾರೆ.
ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಶ್ರೀಮತಿ ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಶ್ರೀಮತಿ ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಶ್ರೀಮತಿ ಪ್ರಮೀಳಾ ನಾಯ್ಡು ಅವರು ಈ ಸಮಿತಿಯಲ್ಲಿ ಇರುವರು. ಮಲದ ಗುಂಡಿ ಸ್ವಚ್ಛತೆ, ಮಕ್ಕಳಿಗೆ ಶಿಕ್ಷೆ ಕೊಡುವುದು ಸೇರಿದಂತೆ ಅಲ್ಲಿನ ಸಮಸ್ಯೆಗಳನ್ನೂ ಈ ಸಮಿತಿ ಪರಿಶೀಲಿಸಲಿದೆ. ಸ್ಥಳಕ್ಕೆ ಭೇಟಿ ಕೊಟ್ಟು ವಾಸ್ತವಾಂಶಗಳನ್ನು ಪರಿಶೀಲಿಸಿ ಈ ಸಮಿತಿಯು ರಾಜ್ಯಾಧ್ಯಕ್ಷರಿಗೆ ವರದಿ ಕೊಡಲಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




























































