ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಇಳಿಮುಖ ಕಾಣುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ ನಡೆಯಲಿರುವ 2022-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಮಾಣಿತ ಕಾರ್ಯಾಚರಣೆ ವಿಧಾನ- ಎಸ್ ಒ ಪಿ ಬಿಡುಗಡೆ ಮಾಡಲಾಗಿದ್ದು, ಇದರ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜುಲೈ 3ನೇ ವಾರದಲ್ಲಿ ನಡೆಸಲುದ್ದೇಶಿಸಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧದಲ್ಲಿ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿ ನೀಡಿದ ಎಸ್ ಒ ಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಜಿಲ್ಲಾಡಳಿತದ ಸಹಕಾರದಿಂದ ಕೋವಿಡ್ ಲಸಿಕೆ ಪಡೆಯಬೇಕೆಂದು ಎಸ್ ಒ ಪಿಯಲ್ಲಿ ಸೂಚಿಸಲಾಗಿದೆ. ಪರೀಕ್ಷಾ ವೇಳೆಯೊಳಗೆ ಒಂದು ಡೋಸ್ ಲಸಿಕೆಯನ್ನಾದರೂ ಪಡೆಯುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಒ ಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರೀಕ್ಷಾ ಪೂರ್ವದಲ್ಲಿ ಪರಿಶೀಲಿಸುವುದು ಮತ್ತು ಅನುಷ್ಠಾನವನ್ನು ಜಿಲ್ಲಾಧಿಕಾರಿಗಳು, ಸಿಇಒ ಮತ್ತು ಎಸ್ ಪಿಯವರು ಖಾತರಿಪಡಿಸುವುದರೊಂದಿಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಸೋಂಕು ನಿವಾರಕ ದ್ರಾವಣದಿಂದ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪರೀಕ್ಷಾ ಕೇಂದ್ರ, ಪರೀಕ್ಷಾ ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳನ್ನು ಸ್ಯಾನಿಟೈಜೇಷನ್ ಮಾಡುವುದು, ಪರೀಕ್ಷಾ ಕೇಂದ್ರಕ್ಕೆ ಆಗಮನ ಮತ್ತು ನಿರ್ಗಮನ ಹಾಗೆಯೇ ಕೊಠಡಿ ಪ್ರವೇಶ ಸಮಯದಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳುವುದು. ಪರೀಕ್ಷಾ ಕೇಂದ್ರದ ಪ್ರವೇಶದ ಸಂದರ್ಭದಲ್ಲಿ ಮಕ್ಕಳ ಕೈಗೆ ಸ್ಯಾನಿಟೈಜ್ ಮಾಡುವುದು. ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿರಬೇಕು. ಒಂದು ಡೆಸ್ಕ್ ಗೆ ಒಬ್ಬ ಪರೀಕ್ಷಾರ್ಥಿ ಮಾತ್ರವೇ ಇರಬೇಕು. ಮಕ್ಕಳು ಯಾವ ಸಮಯದಲ್ಲೂ ಗುಂಪು ಗೂಡುವುದನ್ನು ತಡೆಯುವುದು. ಮನೆಯಿಂದ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ ಕಲ್ಪಿಸುವುದು. ಪರೀಕ್ಷಾ ಕೊಠಡಿಯಲ್ಲಿ ಮಳೆ ನೀರು ಇರುಚಲು ಸಿಂಪಡಿಸದಂತೆ ಕ್ರಮ ವಹಿಸುವುದು. ಗ್ರಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ತಾಲೂಕು ಕೇಂದ್ರಗಳಿಗೆ ಹೋಗದಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದನ್ನು ಖಾತರಿಪಡಿಸಿಕೊಳ್ಳಬೇಕೆಂದು ಎಸ್ ಒಪಿ ಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷ ಕೊಠಡಿ:
ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಇಲ್ಲವೇ ಈ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕೆಂದೂ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಪ್ರವೇಶಿಸುವಂತೆ ನಿರ್ದೇಶಿಸುವುದು. ಆರೋಗ್ಯ ಕೌಂಟರ್ ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ. ಥರ್ಮಲ್ ಸ್ಕ್ಯಾನರ್, ಪಲ್ಸ್ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರುವುದನ್ನು ಖಾತರಿಪಡಿಸಬೇಕೆಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲೇ ಮಾಸ್ಕ್ ನೀಡಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ಕೇರ್ ಸೆಂಟರ್ ಸ್ಥಾಪನೆ:
ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಿ ಅಲ್ಲಿಯೇ ಅವರಿಗೆ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುತ್ತದೆ. ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗುಲಿದ್ದು, ಪರೀಕ್ಷಾರ್ಥಿ ಐಸೋಲೇಷನ್ ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಆರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಕೋವಿಡ್ ಆರೈಕೆ ಕೇಂದ್ರದಲ್ಲಿ ಒಂದು ಅಂಬುಲೆನ್ಸ್ ವಾಹನ ಕಾಯ್ದಿರಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಶೀಟ್ ಗಳ ರವಾನೆ ಕುರಿತು ನಿಗದಿತ ಸೂಚನೆಗಳನ್ನು ಒದಗಿಸಲಾಗಿದ್ದು, ಹಾಗೂ ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಯಶಸ್ಸಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಜೂ. 28ರಂದು ವಿಡಿಯೋ ಕಾನ್ಫೆರೆನ್ಸ್:
ಪರೀಕ್ಷೆಯನ್ನು ಸುಲಲಿತ ಹಾಗೂ ಆರೋಗ್ಯಕರ ಪರಿಸರದಲ್ಲಿ ನಡೆಸುವ ಸಲುವಾಗಿ ಜೂ. 28ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್.ಪಿ ಗಳು, ಡಿಎಚ್ಒ, ಖಜಾನಾಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರು ಭಾಗಿಯಾಗುವರು ಎಂದು ಸಚಿವರು ತಿಳಿಸಿದ್ದಾರೆ.