ಬೆಳಗಾವಿ: “ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
“ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಘನ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ” ಎಂದು ತಿಳಿಸಿದರು.
“ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲಾ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು. ನಂತರ ಅತಿಥಿಗಳು ಹಾಗೂ ಆಹ್ವಾನಿತರಿಗೆ ಮುಖ್ಯಮಂತ್ರಿಗಳು ಭೋಜನಕೂಟ ಏರ್ಪಡಿಸಲಿದ್ದಾರೆ. ಶಾಸಕರ ಹೊರತಾಗಿ ಗಂಗಾಧರ ದೇಶಪಾಂಡೆ ಅವರ ಕುಟುಂಬ ಸೇರಿದಂತೆ ಪ್ರಮುಖ ಕುಟುಂಬದವರಿಗೂ ಆಹ್ವಾನ ನೀಡಲಾಗುವುದು” ಎಂದು ಮಾಹಿತಿ ನೀಡಿದರು.




































































