ಬೆಂಗಳೂರು: ಸಿಎಂ ಬದಲಾವಣೆ ಕುರಿತ ಚರ್ಚೆ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿವೆ. ಒಪ್ಪಂದದಂತೆ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕೆಂದು ಒಕ್ಕಲಿಗ ಶಾಸಕರು ಹಾಗೂ ಸಮುದಾಯದ ಮುಖಂಡರು ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ, ಅಹಿಂದ ನಾಯಕನಿಂದ ಸಿಎಂ ಹುದ್ದೆ ಕಿತ್ತುಕೊಂಡರೆ ಕಾಂಗ್ರೆಸ್ ಪಕ್ಷಕ್ಕೆ ಸೂಕ್ತ ಎದಿರೇಟು ನೀಡಲಾಗುವುದು ಎಂದು ಕುರುಬ ಸಮುದಾಯದ ನಾಯಕರು ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ, ಶನಿವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರು ಡಿಕೆಶಿ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್’ಗೆ ಆಹ್ವಾನಿಸಿರುವ ಬೆಳವಣಿಗೆ ಕುರ್ಚಿ ಗುದ್ದಾಟದ ಬೆಳವಣಿಗೆಗಳನ್ನು ರೋಚಕತೆಗೆ ಕೊಂಡೊಯ್ದಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸೈ. ಸಿದ್ದರಾಮಯ್ಯ, ‘ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ’ ಎಂದು ಹೇಳಿದ್ದಾರೆ.
‘ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

























































