ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ದ ಕೇಳಿಬಂದಿರುವ 40 ಪರ್ಸೆಂಟ್ ಕಮೀಷನ್ ಆರೋಪ ಕುರಿತಂತೆ ಸಮಗ್ರ ತನಿಖೆಯಾಗಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಟ್ಟುಹಿಡಿದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುದ ಡಿ.ಕೆ. ಶಿವಕುಮಾರ್, ಈ ರಾಜ್ಯ ವಿಶ್ವ ಮಟ್ಟದಲ್ಲೇ ಅತಿ ದೊಡ್ಡ ಭ್ರಷ್ಟ ಸರ್ಕಾರ ಎಂದು ಗುತ್ತಿಗೆದಾರರ ಸಂಘದವರೇ ಹೇಳಿದ್ದಾರೆ. ಪ್ರತಿ ಹಂತದಲ್ಲೂ ಈ ಸರ್ಕಾರದಲ್ಲಿ ಲಂಚಾವತಾರ ತಾಂಡವವಾಡುತ್ತಿದೆ. ಇದರಿಂದ ಗುಣಮಟ್ಟದ ಕೆಲಸ ಸಾಧ್ಯವಾಗುತ್ತಿಲ್ಲ ಎಂದು ಗುತ್ತಿಗೆದಾರರೇ ಹೇಳುತ್ತಿದ್ದಾರೆ ಎಂದರು.
ಚುನಾವಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಯಾವುದೇ ದಾಖಲೆ ಇಲ್ಲದೇ ನಮ್ಮ ಸರ್ಕಾರವನ್ನು 10 % ಸರ್ಕಾರ ಎಂದು ಹೇಳಿದ್ದರು. ಆದರೆ ಈಗ ಅವರ ಸರ್ಕಾರದ ವಿರುದ್ಧ ದಾಖಲೆಗಳೇ ಇವೆ. ಈ ವಿಚಾರವಾಗಿ ತನಿಖೆ ನಡೆಸಿ, ನಾವು ತಪ್ಪು ಮಾಡಿದ್ದರೆ ನಮ್ಮ ಅವಧಿಯಲ್ಲಿನ ಕಾಮಗಾರಿಗಳನ್ನು ಸೇರಿಸಿ ತನಿಖೆ ಮಾಡಿ ಎಂದು ಹೇಳುತ್ತಿದ್ದೇವೆ ಎಂದು ಡಿಕೆಶಿ ಹೇಳಿದರು.
40 % ಕಮಿಷನ್ ಸೇರಿದಂತೆ ಹಲವು ವಿಚಾರಗಳಿಂದ ರಾಜ್ಯದ ಗೌರವಕ್ಕೆ ಧಕ್ಕೆಯಾಗುತ್ತಿದೆ. ನಾನು ಐದಾರು ವಿಷಯಗಳನ್ನು ಇಟ್ಟುಕೊಂಡಿದ್ದೇನೆ. ಈ ಭಾಗದ ರೈತರ ಬೆಳೆಹಾನಿಗೆ ನಯಾಪೈಸೆ ಪರಿಹಾರ ಸಿಕ್ಕಿಲ್ಲ. ಕೇಂದ್ರದ ಅನುದಾನ ಕಾಯದೆ ಅವರಿಗೆ ಪರಿಹಾರ ನೀಡಿ, ಮನೆ ಕಟ್ಟಿಕೊಡಿ ಎಂದು ಯಡಿಯೂರಪ್ಪನವರೇ ಹೇಳಿದ್ದಾರೆ. ಅವರಿಗೆ ನಾವು ಧ್ವನಿ ಸೇರಿಸುತ್ತೇವೆ. ಇದುವರೆಗೂ ಒಬ್ಬರಿಗೂ ಒಂದು ಪೈಸೆ ಪರಿಹಾರ ಸಿಕ್ಕಿಲ್ಲ ಎಂದ ಅವರು, ಕೋವಿಡ್ ನಿಂದ ನಷ್ಟ ಅನುಭವಿಸಿದವರಲ್ಲಿ ಯಾರಿಗೆ ಪರಿಹಾರ ಕೊಟ್ಟಿದ್ದಾರೆ ಎಂಬ ಪಟ್ಟಿ ಬಿಡುಗಡೆ ಮಾಡಲಿ. ಸತ್ತವರಿಗೆ ಕೊಟ್ಟಿದ್ದಾರಾ? ಇಲ್ಲ. ಚುನಾವಣೆ ಸಮಯದಲ್ಲಿ ಪ್ರಚಾರಕ್ಕೆ ಬಂದಾಗ ನಾವು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಸುಮಾರು 50 ಮಂದಿ ನೋವು ತೋಡಿಕೊಂಡಿದ್ದರು. ಈ ರೀತಿ ಎಲ್ಲ ಕ್ಷೇತ್ರದಲ್ಲೂ ಸರ್ಕಾರ ವಿಫಲವಾಗಿದೆ. ಈ ವಿಚಾರದಲ್ಲಿ ಸರ್ಕಾರ ತಪ್ಪು ಮಾಡಿದೆ ಎಂದು ಹೇಳಬೇಕಲ್ಲವೇ? ಹೀಗಾಗಿ ನಾವು ಒಂದು ದಿನ ರೈತರ ವಿಚಾರವಾಗಿ, ಮತ್ತೊಂದು ದಿನ ನೆರೆ ವಿಚಾರವಾಗಿ, ಈಗ ಭ್ರಷ್ಟಾಚಾರ ಹಾಗೂ 40 % ಕಮಿಷನ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು.
ಇದು ಕೇವಲ ಬಿಜೆಪಿ ಸರ್ಕಾರವಲ್ಲ, ಸಂಯುಕ್ತ ಸರ್ಕಾರ .ಇದಕ್ಕೆ ಹೇಳೋರು ಕೇಳೋರು ಇಲ್ಲದಂತಾಗಿದೆ. ಹೀಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ನಾವು ಜನರನ್ನು ಕರೆದುಕೊಂಡು ಹೋಗಬೇಕಾಗಿಲ್ಲ. ಜನ ಮತ ಹಾಕುವ ಮೂಲಕ ನಮಗೆ ಬೆಂಬಲ ನೀಡಿದ್ದಾರೆ ಎಂದವರು ತಿಳಿಸಿದರು.