ಚಿಕ್ಕಮಗಳೂರು: ಮುಂಗಾರು ಪೂರ್ವ ಮಳೆಯಿಂದಾಗಿ ಜನ ಚೇತರಿಸಿಕೊಳ್ಳುತ್ತಿರುವಾಗಲೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ವಿಷಮ ಶೀತ ಜ್ವರ ಹಾವಳಿ ಉಲ್ಬಣಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಡೆಂಗ್ಯೂ ಉಲ್ಬಣಿಸಿದ್ದು ಜನವರಿಯಿಂದ ಈವರೆಗೆ 110ಕ್ಕೂ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ವಿಷಮ ಶೀತ ಜ್ವರ ಹೆಚ್ಚುತ್ತಿರುವುದರಿಂದಾಗಿ ಜನರು ಆತಂಕಕ್ಕೊಳಗಾಗಿದ್ದಾರೆ.
ಈ ನಡುವೆ, ಸಾಂಕ್ರಾಮಿಕ ರೋಗಗಳ ಬಗ್ಗೆ ಆರೋಗ್ಯ ಇಲಾಖೆ ಜನರಲ್ಲಿ ಅರಿವು ಮೂಡಿಸಲು ಮುಂದಾಗಿದೆ. ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

























































