ವಾರಣಾಸಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ 9 ಕೋಟಿ 70 ಲಕ್ಷಕ್ಕಿಂತಲೂ ಹೆಚ್ಚಿನ ರೈತ ಫಲಾನುಭವಿಗಳಿಗೆ 20ನೇ ಕಂತಿನ ಆರ್ಥಿಕ ನೆರವು 20,500 ಕೋಟಿ ರೂ. ಹಣವನ್ನು ಇಂದು ವರ್ಗಾವಣೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮದ ಮೂಲಕ ಹಣ ಬಿಡುಗಡೆಗೆ ಚಾಲನೆ ನೀಡಿದರು.
ಇತ್ತ, ದೊಡ್ಡಬಳ್ಳಾಪುರದ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರುಗಿದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ರಾಜ್ಯದಲ್ಲಿರುವ ಫಲಾನುಭವಿಗಳಿಗೆ ಹಣ ಬಿಡುಗಡೆಗೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ, ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ, ಚಿಕ್ಕಬಳ್ಳಾಪುರದ ಸಂಸದ ಡಾ.ಕೆ ಸುಧಾಕರ್, ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಜಿಲ್ಲಾಧಿಕಾರಿ ಬಸವರಾಜ, ಕೃಷಿ ವಿವಿ ಉಪಕುಲಪತಿ ಡಾ. ಸುರೇಶ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.