ಬೆಂಗಳೂರು: ದ್ವೇಷದ ರಾಜಕಾರಣ ಹಿನ್ನೆಲೆಯಲ್ಲಿ ತಮ್ಮ ವಿರುದ್ದ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ದೂರಿದ್ದಾರೆ..
ಸದಾಶಿವನಗರ ತಮ್ಮ ನಿವಾಸ ಬಳಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ರಾಜಕೀಯ ದ್ವೇಷದಿಂದ ನನ್ನ ವಿರುದ್ಧ ಸಿಬಿಐ ವಿಚಾರಣೆ ನಡೆಸಲಾಗುತ್ತಿದೆ. ನಾನು ಮಾಡಬಾರದ ಕೆಲಸ ಮಾಡಿಲ್ಲ. ಹೀಗಾಗಿ ಹೆದರುವ ಅಗತ್ಯವಿಲ್ಲ. ನಾನು ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ ನೀಡಿದ್ದಾರೆ. ಇದುವರೆಗೂ ಯಾರ ಮೇಲೆ ಈ ರೀತಿ ತನಿಖೆ ಮಾಡಿಸಿದ್ದಾರೆ? ರಾಜ್ಯದಲ್ಲಿ ನಾನೊಬ್ಬನೇ ಆಸ್ತಿ ಸಂಪಾದಿಸಿದ್ದೇನಾ? ನನ್ನ ಮೇಲೆ ಯಾವುದಾದರೂ ದೂರು ದಾಖಲಾಗಿದೆಯಾ? ಯಾವುದಾದರೂ ಆರೋಪ ಸಾಬೀತಾಗಿದೆಯಾ? ಯಾರ ಬಳಿಯಾದರೂ ನಾನು ಲಂಚ ಪಡೆದಿದ್ದೇನಾ? ಅಧಿಕಾರ ದುರುಪಯೋಗ ಮಾಡಿಕೊಂಡಿದ್ದೇನಾ? ಇಂಧನ ಸಚಿವ ಆಗಿದ್ದಾಗ ಅಕ್ರಮ ಮಾಡಿದ್ದೇನಾ? ಯಡಿಯೂರಪ್ಪನವರೇ ಅಧಿಕಾರದಲ್ಲಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಲಿ. ಅದನ್ನು ಬಿಟ್ಟು ಸಿಬಿಐಗೆ ಕೊಡುವ ಅಗತ್ಯ ಏನಿತ್ತು?’ ಎಂದು ಪ್ರಶ್ನಿಸಿದರು.
‘ಇದೊಂದು ತನಿಖೆ ಮಾಡುವ ಪ್ರಕರಣವಲ್ಲ ಎಂದು ಅಡ್ವೊಕೇಟ್ ಜನರಲ್ ಅವರೇ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿರುವ ಎಸಿಬಿಯಿಂದಲೇ ವಿಚಾರಣೆ ನಡೆಸಬಹುದು ಎಂದು ತಿಳಿದ್ದಾರೆ. ಆದರೂ ಸರ್ಕಾರದ ಒತ್ತಡದ ಮೇಲೆ ಈ ವಿಚಾರಣೆ ನಡೆಯುತ್ತಿದೆ’ ಎಂದು ದೂರಿದರು.