ಬೆಂಗಳೂರು: ಉದ್ಯಾನ ನಗರಿಯ ಚೌಡಯ್ಯ ಮೆಮೋರಿಯಲ್‌ಹಾಲ್ ಭಾನುವಾರದ ರಜಾ ದಿನವಾದ ಇಂದು ಕಾಂಗ್ರೆಸ್‌ನ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಈ ಸಮಾವೇಶದಲ್ಲಿ ನಡೆದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರ ಪದಗ್ರಹಣ ಸನ್ನಿವೇಶದಲ್ಲಿ ಪಕ್ಷದ ಘಟಾನುಘಟಿ ನಾಯಕರು ಸಮಾಗಮವಾದರು.
ಮಾಜಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಂಸದ ಧೃವನಾರಾಯಣ್ ಅವರು ಪಕ್ಷದ ಕಾರ್ಯಕರ್ತರ ಜಯಘೋಷದ ನಡುವೆ ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡರಲ್ಲದೆ, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ.ಶಿವಕುಮಾರ್ ,ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಡಿಸಿಎಂ ಪರಮೇಶ್ವರ್, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಎಸ್.ಆರ್.ಪಾಟೀಲ್, ಸಲೀಂ ಅಹ್ಮದ್, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಅನೇಕ ಮಂದಿ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿ ಪಕ್ಷದ ಶಕ್ತಿ ಪ್ರದರ್ಶನ ಮಾಡಿದರು.